ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದ್ದ ಚೈನ್ ಸ್ನ್ಯಾಚಿಂಗ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಬಿಚ್ಚಿಟ್ಟಿದ್ದಾರೆ.
ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 17ರಂದು ನಡೆದಿದ್ದ ಈ ಪ್ರಕರಣದಲ್ಲಿ, ಮಹಿಳೆಯೊಬ್ಬಳಿಂದ ಸುಮಾರು 55 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ-ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ 44ರ ಸರ್ವಿಸ್ ರಸ್ತೆಯಲ್ಲಿ ಮುನೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯನ್ನು ಗುರಿಯಾಗಿಸಿಕೊಂಡು, ಆರೋಪಿ ಏಕಾಏಕಿ ಕತ್ತಿಗೆ ಕೈ ಹಾಕಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದನು.
ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಳೆದುಕೊಂಡಿದ್ದ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.
ಎಸ್‌ಪಿ ಎಂ.ಪಿ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ, ಸಿಡಿಆರ್ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲಾಗಿದೆ.
ಬಂಧಿತ ಆರೋಪಿ ಆರೀಪ್ ಖಾನ್, ಡಿಜೆ ಹಳ್ಳಿ ನಿವಾಸಿಯಾಗಿದ್ದು, ಆತನನ್ನು ಬಂಧಿಸಿ, ಕಳವುಗೊಂಡ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಪ್ರಸ್ತುತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
.jpeg)
0 Comments